ದೇವನಹಳ್ಳಿಯಲ್ಲಿ ನಾಳೆ ಅಂಬೇಡ್ಕರ್ ಕಂಚಿನ ಪುತ್ಥಳಿ ಲೋಕಾರ್ಪಣೆ
ಖರ್ಗೆ–ಡಿ.ಕೆ. ಶಿವಕುಮಾರ್ ಅಮೃತ ಹಸ್ತದಿಂದ ಅಂಬೇಡ್ಕರ್ ಪುತ್ಥಳಿ ಲೋಕಾರ್ಪಣೆ
ರಾಜಕೀಯLATEST NEWS
S3 Media House
7/4/20261 min read


ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದಲ್ಲಿರುವ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಕಂಚಿನ ಪುತ್ಥಳಿ ಲೋಕಾರ್ಪಣೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಮೃತ ಹಸ್ತದಿಂದ ಅಂಬೇಡ್ಕರ್ ಪುತ್ಥಳಿ ಲೋಕಾರ್ಪಣೆಗೊಳ್ಳಲಿದೆ. ಸಚಿವ ಕೆ.ಎಚ್. ಮುನಿಯಪ್ಪ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲಾಡಳಿತ ಅಂತಿಮ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ.
ಕಾರ್ಯಕ್ರಮದ ಸಿದ್ಧತೆಗಳನ್ನು ಜಿಲ್ಲಾಧಿಕಾರಿ ಅನುರಾಧ ಹಾಗೂ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕಾರ್ಯಕ್ರಮದಲ್ಲಿ ಹಲವು ಸಚಿವರು, ಶಾಸಕರು ಹಾಗೂ ಗಣ್ಯರು ಭಾಗವಹಿಸುವ ನಿರೀಕ್ಷೆಯಿದೆ.
ಪುತ್ಥಳಿ ಅನಾವರಣದ ಬಳಿಕ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಸುಮಾರು 20 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಕೈಗೊಂಡಿದೆ.
ಇನ್ನು ಕಾರ್ಯಕ್ರಮಕ್ಕೆ ವಿಶೇಷ ಮೆರಗು ನೀಡಲು ಜಿಲ್ಲೆಯ ಪ್ರತಿಯೊಂದು ಗ್ರಾಮ ಪಂಚಾಯಿತಿಯಿಂದ ಡಾ. ಅಂಬೇಡ್ಕರ್ ಅವರ ಭಾವಚಿತ್ರ ಅಲಂಕರಿಸಿದ ಹೂವಿನ ಪಲ್ಲಕ್ಕಿಗಳು ಆಗಮಿಸಲಿವೆ. ವಿವಿಧ ಕಲಾ ತಂಡಗಳ ಪ್ರದರ್ಶನಗಳ ಮೂಲಕ ಕಾರ್ಯಕ್ರಮವನ್ನು ಮತ್ತಷ್ಟು ವೈಭವಯುತವಾಗಿ ನಡೆಸಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ.


