ಅನ್ನಭಾಗ್ಯ ಅಕ್ಕಿ ಕಳ್ಳ ಸಾಗಣೆ : ರಾಜ್ಯ ಸರಕಾರ ಅಲರ್ಟ್!
ಪಡಿತರ ಅಕ್ಕಿ ಕಳ್ಳಸಾಗಣೆ ತಡೆಗೆ ಸಿಸಿಟಿವಿ, ಜಿಪಿಎಸ್ ವ್ಯವಸ್ಥೆ: ಎರಡು-ಮೂರು ತಿಂಗಳಲ್ಲಿ ಇಂದಿರಾ ಕಿಟ್ ವಿತರಣೆ – ಕೆ.ಹೆಚ್. ಮುನಿಯಪ್ಪ
ರಾಜಕೀಯರಾಜ್ಯLATEST NEWS
S3 Media House
7/24/20261 min read


ಬೆಂಗಳೂರು: ರಾಜ್ಯದಲ್ಲಿ ಪಡಿತರ ಅಕ್ಕಿ ಕಾಳಸಂತೆಗೆ ಹೋಗುವುದನ್ನು ತಡೆಯಲು ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದ್ದು, ಎಲ್ಲಾ ರೇಷನ್ ಅಂಗಡಿಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ಹಾಗೂ ಅಕ್ಕಿ ಸಾಗಿಸುವ ಲಾರಿಗಳಿಗೆ ಜಿಪಿಎಸ್ ಅಳವಡಿಕೆ ಮಾಡಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.
ಅನ್ನಭಾಗ್ಯ ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಮಾತನಾಡಿದ ಅವರು, ಪಡಿತರ ಅಕ್ಕಿಯ ಅಕ್ರಮ ಸಾಗಣೆಯನ್ನು ತಡೆಯುವ ಉದ್ದೇಶದಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದರು. ಲಾರಿಗಳಿಗೆ ಜಿಪಿಎಸ್ ಅಳವಡಿಸುವ ಮೂಲಕ ಅಕ್ಕಿ ಸಾಗಣೆ ಮಾಡುವ ವಾಹನಗಳು ಯಾವ ಮಾರ್ಗದಲ್ಲಿ ಸಂಚರಿಸುತ್ತಿವೆ ಹಾಗೂ ಅಂತಿಮವಾಗಿ ಎಲ್ಲಿಗೆ ತಲುಪುತ್ತಿವೆ ಎಂಬುದನ್ನು ಸುಲಭವಾಗಿ ಮೇಲ್ವಿಚಾರಣೆ ಮಾಡಲು ಸಾಧ್ಯವಾಗಲಿದೆ ಎಂದರು.
ಈ ಯೋಜನೆಯನ್ನು ಮುಂದಿನ ಎರಡು ರಿಂದ ಮೂರು ತಿಂಗಳೊಳಗೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದು ಸಚಿವರು ತಿಳಿಸಿದರು.
ಅನ್ನಭಾಗ್ಯ ಯೋಜನೆ ಕುರಿತು ಮಾತನಾಡಿದ ಮುನಿಯಪ್ಪ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಪ್ರತಿ ಫಲಾನುಭವಿಗೆ 10 ಕೆಜಿ ಅಕ್ಕಿ ನೀಡುವ ಭರವಸೆ ನೀಡಿತ್ತು. ಆದರೆ ಕೇಂದ್ರ ಸರ್ಕಾರದಿಂದ ಅಗತ್ಯ ಪ್ರಮಾಣದ ಅಕ್ಕಿ ದೊರೆಯದ ಕಾರಣ ಆರಂಭದಲ್ಲಿ 5 ಕೆಜಿ ಅಕ್ಕಿ ಮತ್ತು ಉಳಿದ 5 ಕೆಜಿಗೆ ಸಮಾನವಾದ ಹಣವನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುತ್ತಿತ್ತು ಎಂದು ಹೇಳಿದರು.
ನಂತರ ಕೇಂದ್ರದಿಂದ ಅಕ್ಕಿ ಪೂರೈಕೆ ಆರಂಭವಾದ ಹಿನ್ನೆಲೆಯಲ್ಲಿ ಹಂತ ಹಂತವಾಗಿ ಅಕ್ಕಿ ವಿತರಣೆಯಲ್ಲಿ ಬದಲಾವಣೆ ಮಾಡಲಾಗಿದೆ. ಪ್ರಸ್ತುತ 3 ಕೆಜಿ ಅಕ್ಕಿ ಮತ್ತು 2 ಕೆಜಿ ರಾಗಿ ವಿತರಿಸಲಾಗುತ್ತಿದೆ. ರಾಗಿ ಸಮರ್ಪಕವಾಗಿ ಲಭ್ಯವಿರುವುದರಿಂದ ಅದನ್ನು ನೀಡಲಾಗುತ್ತಿದೆ. ಉತ್ತರ ಕರ್ನಾಟಕ ಭಾಗದ ಜನರ ಆಹಾರ ಪದ್ಧತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ದಿನಗಳಲ್ಲಿ ರಾಗಿಯ ಬದಲು ಜೋಳ ವಿತರಿಸುವ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಸಚಿವರು ತಿಳಿಸಿದರು.
ಇದೇ ವೇಳೆ ಸರ್ಕಾರದ ಮಹತ್ವಾಕಾಂಕ್ಷಿ ಇಂದಿರಾ ಕಿಟ್ ಯೋಜನೆ ಕುರಿತು ಪ್ರತಿಕ್ರಿಯಿಸಿದ ಅವರು, ಅಗತ್ಯ ಪ್ರಕ್ರಿಯೆಗಳು ನಡೆಯುತ್ತಿದ್ದು, ಮುಂದಿನ ಎರಡು ರಿಂದ ಮೂರು ತಿಂಗಳೊಳಗೆ ಫಲಾನುಭವಿಗಳಿಗೆ ಇಂದಿರಾ ಕಿಟ್ ವಿತರಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಗ್ಯಾರಂಟಿ ಜಾರಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ. ರೇವಣ್ಣ, ಪಡಿತರ ಅಕ್ಕಿ ಕಳ್ಳಸಾಗಣೆ ತಡೆಯುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು, ಇದುವರೆಗೆ ಹಲವು ಕ್ರಮಗಳನ್ನು ಕೈಗೊಂಡಿದ್ದರೂ ಅಕ್ರಮ ಸಾಗಣೆ ಸಂಪೂರ್ಣವಾಗಿ ನಿಲ್ಲಿಸಲು ಸಾಧ್ಯವಾಗಿಲ್ಲ ಎಂದು ಹೇಳಿದರು.
ಅನ್ನಭಾಗ್ಯ ಯೋಜನೆಯ ಅಕ್ಕಿ ಕಾಳಸಂತೆಗೆ ಹೋಗುತ್ತಿರುವ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆದಿದ್ದು, ಅಕ್ಕಿ ಕಳವು ಮತ್ತು ಕಳ್ಳಸಾಗಣೆಯನ್ನು ಯಾವುದೇ ಕಾರಣಕ್ಕೂ ಸಹಿಸಲಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಸರ್ಕಾರ ಕಣ್ಮುಚ್ಚಿಕೊಂಡು ಕುಳಿತುಕೊಳ್ಳುವುದಿಲ್ಲ. ಅಕ್ರಮ ಸಾಗಣೆಯನ್ನು ಸಂಪೂರ್ಣವಾಗಿ ತಡೆಯಲು ಇನ್ನಷ್ಟು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೆಚ್.ಎಂ. ರೇವಣ್ಣ ತಿಳಿಸಿದರು.


