ಮೊಟ್ಟೆ ಎಸೆತ ಪ್ರಕರಣ ಬೆ.ಗ್ರಾ ಜಿಲ್ಲಾ ಬಿಜೆಪಿ ಘಟಕ ಪ್ರತಿಭಟನೆ

ಪ್ರಧಾನಿ ಮೋದಿ ನಿವಾಸದ ಮುಂದೆ ಪ್ರತಿಭಟನೆ ಖಂಡಿಸಿ ಬಿಜೆಪಿ ಆಕ್ರೋಶ: ಮೊಟ್ಟೆ ಎಸೆತ ಪ್ರಕರಣದ ಆರೋಪಿಗಳನ್ನು ಬಂಧಿಸಲು ಆಗ್ರಹ

LATEST NEWSರಾಜಕೀಯಬೆಂಗಳೂರು ಗ್ರಾಮಾಂತರ

S3 Media House

7/24/20261 min read

ದೇವನಹಳ್ಳಿ: ಬೆಂಗಳೂರಿನಲ್ಲಿ ಬಿಜೆಪಿ ಶಾಸಕರ ಮೇಲೆ ನಡೆದ ಮೊಟ್ಟೆ ಎಸೆತ ಪ್ರಕರಣ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಮುಂದೆ ನಡೆದ ಪ್ರತಿಭಟನೆಯನ್ನು ಖಂಡಿಸಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ಜಿಲ್ಲಾಡಳಿತ ಭವನದ ಎದುರು ಬೃಹತ್ ಪ್ರತಿಭಟನೆ ನಡೆಯಿತು.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಸಮೀಪದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಭಾಗವಹಿಸಿ, ಕಾಂಗ್ರೆಸ್ ಸರ್ಕಾರ ಹಾಗೂ ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಜಿಲ್ಲಾ ಅಧ್ಯಕ್ಷ ರಾಮಕೃಷ್ಣ ಹಾಗೂ ಮುಖಂಡ ಅಂಬರೀಷ್ ಗೌಡ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಮುಂದೆ ಪ್ರತಿಭಟನೆ ನಡೆಸಿರುವ ಘಟನೆ ದೇಶದ ಭದ್ರತೆಗೆ ಧಕ್ಕೆ ತರುವಂತಹದ್ದು ಎಂದು ಆರೋಪಿಸಿದರು.

ಈ ವೇಳೆ ಮಾತನಾಡಿದ ಬಿಜೆಪಿ ಮುಖಂಡರು, ಕಾಂಗ್ರೆಸ್ ಪಕ್ಷವು ದೇಶದಲ್ಲಿ ಅಶಾಂತಿ ಮತ್ತು ಅರಾಜಕತೆ ಸೃಷ್ಟಿಸಲು ವಿವಿಧ ಸಂಘಟನೆಗಳು ಹಾಗೂ ಕಾರ್ಯಕರ್ತರನ್ನು ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದರು. ಪ್ರಧಾನಿ ನಿವಾಸದ ಮುಂದೆ ಪ್ರತಿಭಟನೆ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇದೇ ವೇಳೆ ಬೆಂಗಳೂರಿನಲ್ಲಿ ಬಿಜೆಪಿ ಶಾಸಕರ ಮೇಲೆ ಮೊಟ್ಟೆ ಎಸೆದಿರುವ ಘಟನೆ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಖಂಡಿಸಿದ ಬಿಜೆಪಿ ನಾಯಕರು, ಈ ಕೃತ್ಯ ಎಸಗಿದವರನ್ನು ತಕ್ಷಣವೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧವೂ ಧಿಕ್ಕಾರ ಘೋಷಣೆಗಳನ್ನು ಕೂಗಿದರು. ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ರಾಜಕೀಯ ಹಿಂಸಾಚಾರಕ್ಕೆ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ಆರೋಪಿಸಿದರು.

ಪ್ರತಿಭಟನೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸುತ್ತಮುತ್ತ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದರು.

ಬಿಜೆಪಿ ಮುಖಂಡರು ತಮ್ಮ ಮನವಿಯನ್ನು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಸಲ್ಲಿಸಿ, ಮೊಟ್ಟೆ ಎಸೆತ ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ನಮ್ಮನ್ನು ಸಂಪರ್ಕಿಸಲು ದಯವಿಟ್ಟು ಈ ವಿವರಗಳನ್ನು ಬಳಸಿ

s3kannadanews@gmail.com

+91 9902544556

© 2026 S3 Media House. All Rights Reserved.

ನಮ್ಮ ನ್ಯೂಸ್ ಅಪ್ಡೇಟ್ಗಳಿಗಾಗಿ ಸಬ್ಸ್ಕ್ರೈಬ್ ಮಾಡಿ

ನಮ್ಮ ವಾಟ್ಸ್ ಆಪ್ ಚಾನೆಲ್ ಗೆ ಸೇರಲು ಈ ಬಟನ್ ಕ್ಲಿಕ್ ಮಾಡಿ ಕ್ಷಣ ಕ್ಷಣದ ಆಪ್ಡೆಟ್ ಪಡೆಯಿರಿ.