ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ – ಸಚಿವ ಕೆ.ಹೆಚ್. ಮುನಿಯಪ್ಪ
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ "ಡ್ರಗ್ಸ್ ಬೇಡ ಬ್ರೋ"
LATEST NEWSಬೆಂಗಳೂರು ಗ್ರಾಮಾಂತರ
S3 Media House
8/2/20261 min read


ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ಕೆ.ಹೆಚ್. ಮುನಿಯಪ್ಪ ಕರೆ ನೀಡಿದರು.
ದೇವನಹಳ್ಳಿಯ ಖಾಸಗಿ ಕಾಲೇಜಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ "ಡ್ರಗ್ಸ್ ಬೇಡ ಬ್ರೋ" ಮಾದಕ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಯುವಕರು ಮಾದಕ ವಸ್ತುಗಳಿಂದ ದೂರವಿರುವಂತೆ ನೋಡಿಕೊಳ್ಳುವುದು ಶೈಕ್ಷಣಿಕ ಸಂಸ್ಥೆಗಳು, ಪೋಷಕರು ಹಾಗೂ ಸಮಾಜದ ಜವಾಬ್ದಾರಿಯಾಗಿದೆ. ಮಕ್ಕಳು ದೇಶದ ಅಮೂಲ್ಯ ಆಸ್ತಿಯಾಗಿದ್ದು, ದೇಶದ ಅಭಿವೃದ್ಧಿ ವಿದ್ಯಾರ್ಥಿಗಳ ಕೈಯಲ್ಲಿದೆ. ಆದ್ದರಿಂದ ವಿದ್ಯಾರ್ಥಿಗಳನ್ನು ಉತ್ತಮ ಮಾರ್ಗದಲ್ಲಿ ಬೆಳೆಸಲು ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ಸಚಿವರು ಹೇಳಿದರು.
ಮಾದಕ ವಸ್ತುಗಳ ಮಾರಾಟಗಾರರು (ಡ್ರಗ್ಸ್ ಪೆಡ್ಲರ್‌ಗಳು) ಹೆಚ್ಚಾಗಿ ವಿದ್ಯಾರ್ಥಿಗಳನ್ನೇ ಗುರಿಯಾಗಿಸಿಕೊಂಡು ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಲೆ ಹಾಗೂ ಕಾಲೇಜುಗಳ ಸುತ್ತಮುತ್ತ ಹೆಚ್ಚಿನ ನಿಗಾ ವಹಿಸಿ, ಅಕ್ರಮ ಚಟುವಟಿಕೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ (ಎಸ್‌ಪಿ) ಸಚಿವರು ಸೂಚನೆ ನೀಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಇಲಾಖೆ ಹಮ್ಮಿಕೊಂಡಿದ್ದ ಈ ಜಾಗೃತಿ ಕಾರ್ಯಕ್ರಮದಲ್ಲಿ ಸಾವಿರಾರು ವಿದ್ಯಾರ್ಥಿಗಳು ಭಾಗವಹಿಸಿ, ಡ್ರಗ್ಸ್ ವಿರುದ್ಧ ಜಾಗೃತಿ ಮೂಡಿಸುವ ಪ್ರತಿಜ್ಞೆ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆ ಅಧಿಕಾರಿಗಳು, ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


