ಮನೆ ಮನೆಗೆ ಹೋಗಬೇಕಿದ್ದ BLOಗಳು ಮಂಟಪ, ಮಸೀದಿಗಳಲ್ಲಿ ಅರ್ಜಿ ತುಂಬಿಸುತ್ತಿದ್ದಾರೆ!
ಕಾಂಗ್ರೆಸ್ ಕಾರ್ಯಕರ್ತರ ಹಸ್ತಕ್ಷೇಪ ಆರೋಪ: ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು
ರಾಜಕೀಯLATEST NEWS
7/4/20261 min read


ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿರುವ ಬಿಜೆಪಿ, ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.
ಚುನಾವಣಾ ಆಯೋಗವನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ತಾವು ಹಾಗೂ ಶಾಸಕ ಎಸ್. ಸುರೇಶ್ ಕುಮಾರ್ ಪಕ್ಷದ ಪರವಾಗಿ ಚುನಾವಣಾ ಆಯುಕ್ತರನ್ನು ಭೇಟಿ ಮಾಡಿ ಹಲವು ಲೋಪದೋಷಗಳ ಬಗ್ಗೆ ಗಮನ ಸೆಳೆದಿದ್ದೇವೆ ಎಂದು ಹೇಳಿದರು.
ಕೇಂದ್ರ ಚುನಾವಣಾ ಆಯೋಗವು ಸದುದ್ದೇಶದಿಂದ ಎಸ್‌ಐಆರ್ ಪ್ರಕ್ರಿಯೆ ನಡೆಸುತ್ತಿದ್ದು, ಆದರೆ ರಾಜ್ಯದಲ್ಲಿ ಅದು ನಿಯಮಾನುಸಾರ ನಡೆಯುತ್ತಿಲ್ಲ ಎಂದು ಆರೋಪಿಸಿದ ವಿಜಯೇಂದ್ರ, ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ಅರ್ಜಿ ವಿತರಿಸಿ ಮಾಹಿತಿ ಸಂಗ್ರಹಿಸಬೇಕು. ಆದರೆ ಕೆಲವು ಕಡೆ ಕಲ್ಯಾಣ ಮಂಟಪಗಳು, ಮಸೀದಿಗಳಲ್ಲಿ ಕುಳಿತು ಅರ್ಜಿಗಳನ್ನು ಭರ್ತಿ ಮಾಡಿಸಲಾಗುತ್ತಿದೆ ಎಂದು ದೂರಿದರು.
ಇದೇ ವೇಳೆ, ಕಾಂಗ್ರೆಸ್ ಕಾರ್ಯಕರ್ತರು ಅಧಿಕಾರಿಗಳನ್ನು ದುರುಪಯೋಗಪಡಿಸಿಕೊಂಡು ಬಲವಂತವಾಗಿ ಎನ್ಯುಮರೇಷನ್ ಫಾರ್ಮ್‌ಗಳನ್ನು ಭರ್ತಿ ಮಾಡಿಸುತ್ತಿದ್ದಾರೆ. ಬೂತ್ ಮಟ್ಟದ ಏಜೆಂಟ್‌ಗಳಿಗೆ ಮಾಹಿತಿ ನೀಡದೇ ಪ್ರಕ್ರಿಯೆ ನಡೆಸಲಾಗುತ್ತಿದ್ದು, ಈ ಎಲ್ಲ ವಿಚಾರಗಳನ್ನು ಚುನಾವಣಾ ಆಯೋಗದ ಗಮನಕ್ಕೆ ತಂದಿದ್ದೇವೆ ಎಂದರು.
ಎಲ್ಲೆಲ್ಲಿ ಲೋಪಗಳು ನಡೆದಿವೆಯೋ ಅಲ್ಲಿ ಮತ್ತೊಮ್ಮೆ ಎಸ್‌ಐಆರ್ ಪ್ರಕ್ರಿಯೆ ನಡೆಸಬೇಕು. ರಾಜ್ಯ ಹಾಗೂ ಕೇಂದ್ರ ಚುನಾವಣಾ ಆಯೋಗಗಳ ಪ್ರತ್ಯೇಕ ಪ್ರಕ್ರಿಯೆಯಿಂದ ಗೊಂದಲ ಉಂಟಾಗಿದ್ದು, ಇದರಲ್ಲಿ ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದೇವೆ ಎಂದು ತಿಳಿಸಿದರು.
ಜಯನಗರದಲ್ಲಿ ವಿತರಿಸಲಾದ ಎನ್ಯುಮರೇಷನ್ ಫಾರ್ಮ್‌ಗಳಲ್ಲಿ ಕಾಂಗ್ರೆಸ್ ನಾಯಕರ ಭಾವಚಿತ್ರ ಬಳಸಿರುವುದನ್ನೂ ಪ್ರಶ್ನಿಸಿದ ವಿಜಯೇಂದ್ರ, ಈ ಬಗ್ಗೆ ಚುನಾವಣಾ ಆಯುಕ್ತರು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದರು.
ಇದೇ ವೇಳೆ, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ವಿಜಯೇಂದ್ರ, ಪಶ್ಚಿಮ ಬಂಗಾಳದಂತಹ ಪರಿಸ್ಥಿತಿಯನ್ನು ಕರ್ನಾಟಕದಲ್ಲಿ ಸೃಷ್ಟಿಸಲು ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ಅಲ್ಲದೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧವೂ ತೀವ್ರ ವಾಗ್ದಾಳಿ ನಡೆಸಿದರು.


