ಇಬ್ಬರು ಹೆಣ್ಣು ಮಕ್ಕಳನ್ನು ಕೊಂದು ತಂದೆಯಿಂದ ಆತ್ಮಹತ್ಯೆಗೆ ಯತ್ನ

ಕೆಂಪೇಗೌಡ ವಿಮಾನ ನಿಲ್ದಾಣದ ತಾಜ್ ಹೋಟೆಲ್‌ನಲ್ಲಿ ದಾರುಣ ಘಟನೆ; ತಂದೆ ಗಂಭೀರ

LATEST NEWSಅಪರಾಧಬೆಂಗಳೂರು ಗ್ರಾಮಾಂತರ

S3 Media House

8/11/20261 min read

ಬೆಂಗಳೂರು: ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳನ್ನು ಕೊಂದು ತಂದೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿರುವ ಪ್ರತಿಷ್ಠಿತ ತಾಜ್ ಹೋಟೆಲ್‌ನಲ್ಲಿ ನಡೆದಿದೆ.

ಮೃತ ಮಕ್ಕಳನ್ನು ಶೇಖ್ ಜಿಹಾರ (5) ಹಾಗೂ ಶೇಖ್ ಜೋಯಾ (10) ಎಂದು ಗುರುತಿಸಲಾಗಿದೆ. ಮಕ್ಕಳ ತಂದೆ ನಾಗವಾರ ಮೂಲದ ಇಮ್ರಾನ್ (40) ಆತ್ಮಹತ್ಯೆಗೆ ಯತ್ನಿಸಿದ್ದು, ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ?

ಮಾಹಿತಿಯ ಪ್ರಕಾರ, ಇಮ್ರಾನ್ ತನ್ನ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಬಳಿಕ ಚಾಕುವಿನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಘಟನೆಯ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಕೌಟುಂಬಿಕ ವಿಚಾರವೇ ಅಥವಾ ಬೇರೆ ಯಾವುದಾದರೂ ಕಾರಣದಿಂದ ಈ ಕೃತ್ಯ ಎಸಗಲಾಗಿದೆಯೇ ಎಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ತಂದೆಯ ಚೀರಾಟ ಕೇಳಿ ಕೊಠಡಿಗೆ ತೆರಳಿದ ಸೆಕ್ಯುರಿಟಿ ಸಿಬ್ಬಂದಿ

ಇಮ್ರಾನ್ ಆತ್ಮಹತ್ಯೆಗೆ ಯತ್ನಿಸಿದ ಬಳಿಕ ನೋವಿನಿಂದ ಚೀರಾಡುತ್ತಿದ್ದ ಶಬ್ದ ಕೇಳಿ ಹೋಟೆಲ್‌ನ ಸೆಕ್ಯುರಿಟಿ ಸಿಬ್ಬಂದಿ ಕೊಠಡಿಗೆ ತೆರಳಿದ್ದಾರೆ ಎನ್ನಲಾಗಿದೆ. ಈ ವೇಳೆ ಇಮ್ರಾನ್ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಹೋಟೆಲ್ ಸಿಬ್ಬಂದಿ ಹಾಗೂ ಸೆಕ್ಯುರಿಟಿ ಸಿಬ್ಬಂದಿ ಅವರನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಏರ್‌ಪೋರ್ಟ್‌ನ ತಾಜ್ ಹೋಟೆಲ್ ಸಿಬ್ಬಂದಿಯ ನೆರವಿನಿಂದ ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಇಮ್ರಾನ್ ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಪೊಲೀಸರಿಂದ ಪರಿಶೀಲನೆ

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಠಡಿಯಲ್ಲಿ ದೊರೆತಿರುವ ವಸ್ತುಗಳು ಹಾಗೂ ಇತರ ಸಾಕ್ಷ್ಯಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದು, ಘಟನೆಯ ಹಿಂದಿನ ನಿಖರ ಕಾರಣ ತಿಳಿಯಲು ತನಿಖೆ ಮುಂದುವರಿಸಿದ್ದಾರೆ.

ಇಬ್ಬರು ಮಕ್ಕಳ ಸಾವಿನ ಸುದ್ದಿ ತಿಳಿದು ಕುಟುಂಬಸ್ಥರಲ್ಲಿ ಆಘಾತ ಹಾಗೂ ದುಃಖದ ವಾತಾವರಣ ನಿರ್ಮಾಣವಾಗಿದೆ. ತಂದೆ ಚೇತರಿಸಿಕೊಂಡ ಬಳಿಕ ಅವರಿಂದ ಹೆಚ್ಚಿನ ಮಾಹಿತಿ ಪಡೆಯಲು ಪೊಲೀಸರು ಮುಂದಾಗಿದ್ದಾರೆ.

ನಮ್ಮನ್ನು ಸಂಪರ್ಕಿಸಲು ದಯವಿಟ್ಟು ಈ ವಿವರಗಳನ್ನು ಬಳಸಿ

s3kannadanews@gmail.com

+91 9902544556

© 2026 S3 Media House. All Rights Reserved.

ನಮ್ಮ ನ್ಯೂಸ್ ಅಪ್ಡೇಟ್ಗಳಿಗಾಗಿ ಸಬ್ಸ್ಕ್ರೈಬ್ ಮಾಡಿ

ನಮ್ಮ ವಾಟ್ಸ್ ಆಪ್ ಚಾನೆಲ್ ಗೆ ಸೇರಲು ಈ ಬಟನ್ ಕ್ಲಿಕ್ ಮಾಡಿ ಕ್ಷಣ ಕ್ಷಣದ ಆಪ್ಡೆಟ್ ಪಡೆಯಿರಿ.