ಅಬಕಾರಿ ಇಲಾಖೆ ಸುವ್ಯವಸ್ಥಿತ ನಿರ್ವಹಣೆಗೆ ಆದ್ಯತೆ: ಸಚಿವ ಶಿವಲಿಂಗೇಗೌಡ

“ಯಾರು ಏನೇ ಆರೋಪ ಮಾಡಿದರೂ, ಯಾವುದೇ ಕಳಂಕಕ್ಕೆ ಅವಕಾಶ ನೀಡದೆ ಪಾರದರ್ಶಕವಾಗಿ ಕೆಲಸ ಮಾಡುತ್ತೇವೆ

LATEST NEWSಬೆಂಗಳೂರು

S3 Media House

8/13/20261 min read

ಬೆಂಗಳೂರು: ಅಬಕಾರಿ ಇಲಾಖೆ ಖಾತೆ ಹಂಚಿಕೆ ವಿಚಾರದಲ್ಲಿ ತೃಪ್ತಿ ಅಥವಾ ಅತೃಪ್ತಿ ಮುಖ್ಯವಲ್ಲ. ಸರ್ಕಾರ ಯಾವುದೇ ಜವಾಬ್ದಾರಿ ನೀಡಿದರೂ ಅದನ್ನು ಸಮರ್ಥವಾಗಿ ನಿರ್ವಹಿಸುವುದು ಸಂಪುಟ ಸದಸ್ಯರ ಕರ್ತವ್ಯ ಎಂದು ಸಚಿವ ಶಿವಲಿಂಗೇಗೌಡ ಹೇಳಿದ್ದಾರೆ.

ಅಬಕಾರಿ ಇಲಾಖೆ ಒಂದು ಪ್ರಮುಖ ಆದಾಯ ಮೂಲವಾಗಿದ್ದು, ಇಲಾಖೆಯನ್ನು ಸುವ್ಯವಸ್ಥಿತವಾಗಿ ನಿರ್ವಹಿಸುವುದಕ್ಕೆ ಆದ್ಯತೆ ನೀಡಲಾಗುವುದು. ಇಲಾಖೆ ಸಮರ್ಪಕವಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ಸರ್ಕಾರಕ್ಕೆ ನಿರೀಕ್ಷಿತ ಹಣಕಾಸು ಹರಿವು ಸಾಧ್ಯವಾಗುತ್ತದೆ. ಜೊತೆಗೆ, ಹಣಕಾಸು ಸೋರಿಕೆಯನ್ನು ತಡೆಯುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

“ಯಾರು ಏನೇ ಆರೋಪ ಮಾಡಿದರೂ, ಯಾವುದೇ ಕಳಂಕಕ್ಕೆ ಅವಕಾಶ ನೀಡದೆ ಪಾರದರ್ಶಕವಾಗಿ ಕೆಲಸ ಮಾಡುತ್ತೇವೆ. ಇದು ಸಾರ್ವಜನಿಕರೊಂದಿಗೆ ನೇರವಾಗಿ ಸಂಬಂಧ ಹೊಂದಿರುವ ಇಲಾಖೆ. ಯಾವಾಗಲೂ ದೊಡ್ಡ ಪ್ರಮಾಣದ ಹಣದ ವ್ಯವಹಾರ ನಡೆಯುವ ಇಲಾಖೆಯಾಗಿರುವುದರಿಂದ ಭ್ರಷ್ಟಾಚಾರದ ಆರೋಪಗಳು ಕೇಳಿಬರುತ್ತಲೇ ಇರುತ್ತವೆ. ಇಂತಹ ಎಲ್ಲ ವಿಚಾರಗಳನ್ನು ಸರಿದೂಗಿಸಿಕೊಂಡು, ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸುವ ಕೆಲಸ ಮಾಡುತ್ತೇವೆ” ಎಂದು ಶಿವಲಿಂಗೇಗೌಡ ಹೇಳಿದರು.

ಬಿಡದಿ ಹೋರಾಟ ವಿಚಾರಕ್ಕೆ ಪ್ರತಿಕ್ರಿಯೆ

ಬಿಡದಿ ಹೋರಾಟಕ್ಕೆ ಸಂಬಂಧಿಸಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, “ಅವರು ಹೋರಾಟ ಮಾಡಲಿ. ನಾವು ಪ್ರತಿಪಕ್ಷದಲ್ಲಿದ್ದಾಗಲೂ ಇದೇ ರೀತಿ ಹೋರಾಟಗಳನ್ನು ಮಾಡಿದ್ದೇವೆ. ಪ್ರಜಾಪ್ರಭುತ್ವದಲ್ಲಿ ಪ್ರತಿಪಕ್ಷಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕು ಹೊಂದಿವೆ” ಎಂದು ಹೇಳಿದರು.

ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳ ಒತ್ತಾಯ

ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಪ್ರತಿಪಕ್ಷಗಳು ಪಟ್ಟು ಹಿಡಿದಿರುವ ವಿಚಾರವಾಗಿ ಮಾತನಾಡಿದ ಅವರು, “ಯಾರಾದರೂ ರಾಜೀನಾಮೆ ನೀಡಬೇಕು ಎಂದು ಹೇಳುವುದಾದರೆ, ಮೊದಲು ಅವರ ವಿರುದ್ಧದ ಅಪರಾಧ ಅಥವಾ ಆರೋಪವನ್ನು ಸಾಬೀತುಪಡಿಸಬೇಕು. ಕೇವಲ ಆರೋಪದ ಆಧಾರದ ಮೇಲೆ ನಿರ್ಧಾರ ಕೈಗೊಳ್ಳುವುದು ಸರಿಯಲ್ಲ” ಎಂದು ಅಭಿಪ್ರಾಯಪಟ್ಟರು.

ಸಚಿವರಾಗಿ ಮೊದಲ ಅಧಿವೇಶನ

ಸಚಿವರಾಗಿ ಮೊದಲ ಬಾರಿಗೆ ಅಧಿವೇಶನದಲ್ಲಿ ಭಾಗವಹಿಸುವ ಕುರಿತು ಮಾತನಾಡಿದ ಶಿವಲಿಂಗೇಗೌಡ, “ಈ ಹಿಂದೆ ಶಾಸಕರಾಗಿ ಹಲವು ಅಧಿವೇಶನಗಳಲ್ಲಿ ಮಾತನಾಡಿದ್ದೇನೆ. ಈಗ ಸಚಿವನಾಗಿ ಹೊಸ ಜವಾಬ್ದಾರಿ ವಹಿಸಿಕೊಂಡು ಕೆಲಸ ಮಾಡುತ್ತಿದ್ದೇನೆ. ಸರ್ಕಾರ ನೀಡಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವುದು ನನ್ನ ಉದ್ದೇಶ” ಎಂದರು.

ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಮೊಬೈಲ್ ಬಳಕೆ ವಿಚಾರ

ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಮೊಬೈಲ್ ಬಳಸಿರುವ ಆರೋಪಕ್ಕೆ ಸಂಬಂಧಿಸಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, “ಅದು ಹೇಗೆ ಆಗಿದೆ, ಯಾಕೆ ಆಗಿದೆ ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ. ಅವರು ಈಗಾಗಲೇ ಸಂಕಷ್ಟದಲ್ಲಿದ್ದಾರೆ. ಅವರ ಬಗ್ಗೆ ನಾನು ಹೆಚ್ಚಿನ ಮಾತು ಮಾತನಾಡಲು ಬಯಸುವುದಿಲ್ಲ” ಎಂದು ಹೇಳಿದರು.

ಇದೇ ವೇಳೆ, ಕಾನೂನು ಪಾಲನೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ಶಿವಲಿಂಗೇಗೌಡ ಹೇಳಿದರು. “ಕಾನೂನನ್ನು ಕಾಪಾಡುವುದು ಮತ್ತು ಅದಕ್ಕೆ ಗೌರವ ನೀಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ. ಎಲ್ಲರೂ ಕಾನೂನಿನ ಚೌಕಟ್ಟಿನಲ್ಲಿಯೇ ನಡೆದುಕೊಳ್ಳಬೇಕು” ಎಂದು ಅವರು ತಿಳಿಸಿದರು.

ನಮ್ಮನ್ನು ಸಂಪರ್ಕಿಸಲು ದಯವಿಟ್ಟು ಈ ವಿವರಗಳನ್ನು ಬಳಸಿ

s3kannadanews@gmail.com

+91 9902544556

© 2026 S3 Media House. All Rights Reserved.

ನಮ್ಮ ನ್ಯೂಸ್ ಅಪ್ಡೇಟ್ಗಳಿಗಾಗಿ ಸಬ್ಸ್ಕ್ರೈಬ್ ಮಾಡಿ

ನಮ್ಮ ವಾಟ್ಸ್ ಆಪ್ ಚಾನೆಲ್ ಗೆ ಸೇರಲು ಈ ಬಟನ್ ಕ್ಲಿಕ್ ಮಾಡಿ ಕ್ಷಣ ಕ್ಷಣದ ಆಪ್ಡೆಟ್ ಪಡೆಯಿರಿ.